ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆ ಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ವೇಳೆ ಸಂಭವಿಸಿದ ಭೀಕರ ಜಲ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ನೆನ್ನೆ (ಭಾನುವಾರ) 14 ಮಂದಿ ಕಪ್ಪೆಚಿಪ್ಪು ಆರಿಸಲು ನದಿಗೆ ಇಳಿದಿದ್ದರು. ಆದರೆ ನದಿಯ ನೀರಿನ ಹರಿವು ಏಕಾಏಕಿ ಹೆಚ್ಚಾದ ಪರಿಣಾಮ ಈ ಘೋರ ದುರಂತ ಸಂಭವಿಸಿದೆ. ಇಡೀ ಭಟ್ಕಳ ತಾಲೂಕನ್ನೇ ಈ ಘಟನೆ ಬೆಚ್ಚಿಬೀಳಿಸಿದ್ದು, ಮೃತರ ಕುಟುಂಬಗಳ ಆಕ್ರಂದನ ಮುಗಿಲುಮುಟ್ಟಿದೆ.
ಒಟ್ಟು 14 ಜನರ ಪೈಕಿ 12 ಮಹಿಳೆಯರು ಹಾಗೂ ಇಬ್ಬರು ಪುರುಷರು ಕಪ್ಪೆಚಿಪ್ಪು ಸಂಗ್ರಹಿಸಲು ನದಿಗೆ ಇಳಿದಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಒಂದಷ್ಟು ಕಪ್ಪೆಚಿಪ್ಪುಗಳನ್ನು ಹಾಯ್ದು ನದಿ ತಟದಲ್ಲಿ ಇರಿಸಿದ್ದರು. ಆದರೆ, ಇದ್ದಕ್ಕಿದ್ದಂತೆ ನೀರಿನ ಅಲೆಗಳ ಅಬ್ಬರ ಹೆಚ್ಚಾಗಿದೆ. ನೋಡನೋಡುತ್ತಿದ್ದಂತೆಯೇ ನದಿಯ ಆಳಕ್ಕೆ ಸಿಲುಕಿ ಹಲವರು ಕೊಚ್ಚಿಹೋಗಿದ್ದಾರೆ. ಈ ದುರ್ಘಟನೆಯಲ್ಲಿ ಇದುವರೆಗೆ 10 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ಮೃತಪಟ್ಟವರಲ್ಲಿ 9 ಮಂದಿ ಮಹಿಳೆಯರು ಮತ್ತು ಓರ್ವ ಪುರುಷ ಸೇರಿದ್ದಾರೆ. ನದಿಯ ಒಳಭಾಗದಲ್ಲಿನ ಹೊಂಡ ಅಥವಾ ನೀರಿನ ಮಟ್ಟದ ಬಗ್ಗೆ ಸರಿಯಾದ ಅಂದಾಜು ಇಲ್ಲದೆ ಮುಂದಕ್ಕೆ ಹೋಗಿದ್ದೇ ಈ ಅನಾಹುತಕ್ಕೆ ಕಾರಣ ಎನ್ನಲಾಗಿದೆ.
ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದವರ ಪೈಕಿ ಮೂವರನ್ನು ಸ್ಥಳೀಯರು ಹಾಗೂ ಮೀನುಗಾರರು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಕ್ಷಿಸಲ್ಪಟ್ಟವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಇನ್ನೂ ಓರ್ವ ನಾಪತ್ತೆಯಾಗಿದ್ದು, ಅವರಿಗಾಗಿ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರ ನೆರವಿನೊಂದಿಗೆ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಭಟ್ಕಳ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘೋರ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಭಟ್ಕಳದ ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಸುದ್ದಿ ತಿಳಿದು ತೀವ್ರ ಸಂಕಟವಾಯಿತು,” ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಈ ದುರ್ಘಟನೆಗೆ ಕಂಬನಿ ಮಿಡಿದಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ನೆರವು ಪ್ರಕಟಿಸಿದ್ದಾರೆ.
