ಬೆಂಗಳೂರು : ಶಿಕ್ಷಕಿ ಬೈದರೆಂಬ ವಿಚಾರಕ್ಕೆ ಮನನೊಂದು 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ ಈ ದುರ್ಘಟನೆ ನಡೆದಿದೆ. ಮಧುಶ್ರೀ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಆಕೆ ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳಗ್ಗೆ ಪೋಷಕರು ಎದ್ದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಈ ಘಟನಾ ಸ್ಥಳದಲ್ಲಿ ಡೆತ್‌ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ, ‘ಶಾಲೆಯಲ್ಲಿ ನಡೆದ ಘಟನೆ ನನಗೆ ತುಂಬಾ ನೋವು ತಂದಿದೆ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಈ ಅವಮಾನ ಸಹಿಸಿಕೊಂಡು ಬದುಕಲು ಆಗುತ್ತಿಲ್ಲ. ಮನಸ್ಸಿಗೆ ತುಂಬಾ ನೋವಾಗಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ’ ಎಂದು ವಿದ್ಯಾರ್ಥಿನಿ ಬರೆದಿದ್ದಾಳೆ.
‘ಅಮ್ಮ, ಅಕ್ಕ, ತಂಗಿ, ತಮ್ಮ ಯಾರದ್ದೂ ತಪ್ಪಿಲ್ಲ. ನನ್ನ ಅಮ್ಮನನ್ನು ಯಾರು ಕೂಡ ಬೈಯ್ಯಬೇಡಿ. ಎಲ್ಲರೂ ನನ್ನನ್ನು ಕ್ಷಮಿಸಿ. ನನಗೆ ಈ ಭೂಮಿ ಮೇಲೆ ಬದುಕುವ ಅರ್ಹತೆ ಇಲ್ಲ’ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾಳೆ.
ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸೂರ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡೆತ್‌ನೋಟ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿದ್ಯಾರ್ಥಿನಿಯ ಸಾವಿನ ಕುರಿತು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ :ಶ್ರೀನಗರ ಕಿಟ್ಟಿ ನಟನೆಯ ‘ವೇಷಗಳು’ ಸಿನಿಮಾದ ವಿಶೇಷ ಹಾಡು ಬಿಡುಗಡೆ..!
