ಬೆಂಗಳೂರು : ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಸೋಮವಾರ ಬೆಳಿಗ್ಗೆ ಆದೇಶ ಹೊರಡಿಸಲಾಗಿದೆ. ಅಲ್ಲದೆ, ಶಿವಶಂಕರಪ್ಪ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ.
ಇದರ ಜೊತೆಗೆ, ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವ ಸಂಬಂಧ ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶ ಹೊರಬೀಳುವವರೆಗೆ ಕೆಪಿಎಸ್‌ಸಿಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸ್ವಜನಪಕ್ಷಪಾತ ಸೇರಿದಂತೆ ವಿವಿಧ ಆರೋಪಗಳು ಕೇಳಿಬಂದಿದ್ದವು. ಈ ಆರೋಪಗಳ ಕುರಿತು ಸಲ್ಲಿಕೆಯಾಗಿದ್ದ ದೂರಿನ ಆಧಾರದ ಮೇಲೆ ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆ. ಇತ್ತೀಚೆಗೆ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮಾ ಎಸ್. ಸಾಹುಕಾರ್ ವಿರುದ್ಧವೂ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವೇಳೆ ನಕಲಿ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ದಾಖಲೆಗಳ ಪರಿಶೀಲನೆ ವೇಳೆ ಅಕ್ರಮ ಬೆಳಕಿಗೆ ಬಂದಿತ್ತು.

‘ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಅಧಿಕಾರ ದುರುಪಯೋಗ, ಸ್ವಜನಪಕ್ಷಪಾತ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿರುವ ಆರೋಪಗಳು ಕೇಳಿಬಂದಿವೆ. ವಿಶೇಷವಾಗಿ ತಮ್ಮ ಪುತ್ರಿ ಸುಮಾ ಎಸ್. ಸಾಹುಕಾರ್ ಅವರಿಗೆ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆ ಪಡೆಯಲು ಅನುಕೂಲವಾಗುವಂತೆ ಸುಳ್ಳು ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನು ಬಳಸಿಕೊಂಡು ಮೀಸಲಾತಿಯ ಲಾಭ ಪಡೆಯಲು ಅವಕಾಶ ಮಾಡಿಕೊಟ್ಟಿರುವ ಆರೋಪವೂ ಉಲ್ಲೇಖಿಸಲಾಗಿದೆ.

ಈ ಆರೋಪಗಳು ಗಂಭೀರ ಸ್ವರೂಪದ್ದಾಗಿರುವ ಹಿನ್ನೆಲೆಯಲ್ಲಿ ಅವುಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಅಗತ್ಯ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ. ಸಂವಿಧಾನದ 317(1) ನೇ ವಿಧಿಯ ಅನ್ವಯ ಪ್ರಕರಣವನ್ನು ರಾಷ್ಟ್ರಪತಿಗಳಿಗೆ ಉಲ್ಲೇಖಿಸಲು ಶಿಫಾರಸು ಮಾಡಲಾಗಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ’ ಎಂದು ರಾಜ್ಯಪಾಲರ ಆದೇಶದ ಕುರಿತು ಲೋಕಭವನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕೆಪಿಎಸ್‌ಸಿಯ ಕಾರ್ಯನಿರ್ವಹಣೆ, ನೇಮಕಾತಿ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ಆರೋಪಗಳ ತನಿಖೆ ಯಾವ ಹಂತಕ್ಕೆ ಸಾಗಲಿದೆ ಎಂಬುದರ ಮೇಲೆ ಈಗ ಎಲ್ಲರ ಗಮನ ನೆಟ್ಟಿದೆ. ಇದನ್ನೂ ಓದಿ : ಕೆಪಿಎಸ್‌ಸಿ ಅಧ್ಯಕ್ಷರ ಅಮಾನತು, ಹೊಸ ಕಾನೂನು, ವಿದೇಶಾಂಗ ನೀತಿ ಹಾಗೂ ಆರ್‌ಎಸ್‌ಎಸ್-ವಿಎಚ್‌ಪಿ ವಿವಾದ ಕುರಿತು ಪ್ರತಿಕ್ರಿಯೆ – ಗೃಹ ಸಚಿವ ಪ್ರಿಯಾಂಕ್ ಖರ್ಗೆ
