ಬೆಂಗಳೂರು : ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಬೆಂಗಳೂರಿನಲ್ಲಿ “ಸೋನಮ್ ಬೆಂಬಲಿಸಿ ಕರ್ನಾಟಕ” ಹೋರಾಟ ಆರಂಭವಾಗಿದೆ. ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ “ಸೋನಮ್ ಬೆಂಬಲಿಸಿ ಕರ್ನಾಟಕ ಹೋರಾಟ ಸಮಿತಿ” ವತಿಯಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಚಾಲನೆ ನೀಡಲಾಯಿತು. ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ, ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರಿಗೆ ಬೆಂಬಲ ಸೂಚಿಸಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡರು
ಪ್ರತಿಭಟನಾಕಾರರು, ನೀಟ್ ಪರೀಕ್ಷಾ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದರು. ಪರೀಕ್ಷಾ ಅಕ್ರಮಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ, ನೀಟ್ ಪರೀಕ್ಷಾ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿದ್ಯಾರ್ಥಿಗಳ ವಿಶ್ವಾಸವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಹೋರಾಟ ಮುಂದಿನ ದಿನಗಳಲ್ಲಿಯೂ ಫ್ರೀಡಂ ಪಾರ್ಕ್‌ನಲ್ಲಿ ಮುಂದುವರಿಯಲಿದ್ದು, ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೋರಾಟ ಸಮಿತಿ ಕರೆ ನೀಡಿದೆ. ನೀಟ್ ಪರೀಕ್ಷೆಯ ಪಾರದರ್ಶಕತೆ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಮುಂದಿಟ್ಟುಕೊಂಡು ಆರಂಭವಾಗಿರುವ ಈ ಧರಣಿ ಮುಂದಿನ ದಿನಗಳಲ್ಲಿ ಯಾವ ರೀತಿಯ ಪ್ರತಿಕ್ರಿಯೆ ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ : ರಾಜ್ಯದಲ್ಲಿ ವೈರಾಣು ಜ್ವರ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹೈ ಅಲರ್ಟ್..!
