20.9 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು – ಡಿಸಿಎಂ ಜಿ. ಪರಮೇಶ್ವರ್

ಚಿಕ್ಕಬಳ್ಳಾಪುರ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆಗ್ರಹಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸದ ವೇಳೆ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ʼನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ’ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು, ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತವೆ ಎಂದರೆ ಏನರ್ಥ? ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ ಎಂಬ ಅರಿವಿಲ್ಲವೇ? ಇದನ್ನು ಪ್ರಶ್ನಿಸುವುದು ನಮ್ಮ ಹಕ್ಕು ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿನ್ನೆ ನವದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರನ್ನು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ಪರವಾಗಿ ನಿಂತು ಪ್ರಶ್ನಿಸುವವರನ್ನೇ ಬಂಧಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ದೇಶದ ವಿದ್ಯಾಮಾನವನ್ನು ತಾವು ಗಮನಿಸಿದ್ದೀರಿ. ಈ ದೇಶದ ಯುವಕರಿಗೆ ಶಿಕ್ಷಣ ಕೊಡಬೇಕು ಎಂದು ಕಾನೂನಾತ್ಮಕವಾಗಿ ಅವಕಾಶ ಕಲ್ಪಿಸಲಾಗಿದೆ. ಪ್ರತಿಯೊಬ್ಬ ಪ್ರಜೆಯೂ ಶಿಕ್ಷಣ ಪಡೆಯಬೇಕು. ಈ ಬಗ್ಗೆ ಸರ್ಕಾರ ಜವಾಬ್ದಾರಿ ವಹಿಸಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ತಿಳಿಸಿದ್ದಾರೆ. ಲಕ್ಷಾಂತರ ಯುವಕರು ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕೋರ್ಸ್‌ಗಳನ್ನು ಪೂರ್ಣಗೊಳಿಸಿ ಪ್ರಪಂಚದಾದ್ಯಂತ ಕೆಲಸ ಮಾಡುತ್ತಿದ್ದಾರೆ. ಮೊದಲು CET ಪರೀಕ್ಷೆಯನ್ನು ರಾಜ್ಯ ಸರ್ಕಾರವೇ ನಡೆಸುತ್ತಿತ್ತು.

ಆ ಸಮಯದಲ್ಲಿ ಯಾವುದೇ ಸಮಸ್ಯೆಯಾಗದಂತೆ ಪರೀಕ್ಷೆ ನಡೆಯುತ್ತಿತ್ತು. ನಾನು ಉನ್ನತ ಶಿಕ್ಷಣ ಸಚಿವನಾಗಿದ್ದಾಗಲೂ ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ನಂತರ ಕೇಂದ್ರ ಸರ್ಕಾರ CET ಬದಲಿಗೆ ನೀಟ್ ಪರೀಕ್ಷೆಯನ್ನು ಕೈಗೆತ್ತಿಕೊಂಡಿತು. ಅನೇಕರು ವಿರೋಧಿಸಿದರು, ವಿದ್ಯಾರ್ಥಿಗಳು ಒಪ್ಪಿಕೊಂಡರು. ಆದರೆ ಈಗ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತಿವೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆಯಾಗುತ್ತಿದೆ ಎಂದು ಗುಡುಗಿದರು.

ದೇಶದ ಯುವಕರ ಭವಿಷ್ಯ ಮುಖ್ಯ. ಅವರಿಗೆ ಉತ್ತಮ ಶಿಕ್ಷಣ ಮತ್ತು ಉದ್ಯೋಗ ನೀಡುವುದು ನಮ್ಮ ಜವಾಬ್ದಾರಿ. ಯುವಕರೇ ದೇಶ ಕಟ್ಟುವವರು. ಅವರ ಜೀವನ ರೂಪಿಸಬೇಕಿದೆ. ಇಂದು ಜಿಲ್ಲೆಯ ಪರಿಶೀಲನೆಗೆ ಬಂದಿದ್ದೇನೆ. ನಿಮ್ಮ ಜೊತೆ ಧ್ವನಿಗೂಡಿಸಲು ಇಲ್ಲಿಗೆ ಬಂದಿದ್ದೇನೆ. ನಿಮ್ಮ ಭವಿಷ್ಯ ನಮಗೆ ಬಹಳ ಮುಖ್ಯ. ಕಾಂಗ್ರೆಸ್ ಪಕ್ಷ ಯಾವಾಗಲೂ ಯುವಕರ ಭವಿಷ್ಯ ಕಟ್ಟುವ ಕೆಲಸ ಮಾಡಿದೆ. ನಮ್ಮ ಸರ್ಕಾರ ಈಗಾಗಲೇ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಆದೇಶ ಹೊರಡಿಸಿದೆ. ಮುಂದೆಯೂ ಹೆಚ್ಚಿನ ನೇಮಕಾತಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಅದರಂತೆ ಬ್ಯಾಕ್‌ಲಾಗ್ ನೇಮಕಾತಿಯನ್ನೂ ಮಾಡಲಾಗುವುದು. ಎಲ್ಲ ವರ್ಗದ ಯುವಕರಿಗೆ ಉದ್ಯೋಗ ಕಲ್ಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು. ಈ ಪ್ರತಿಭಟನೆಯಲ್ಲಿ ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವ ರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗಭೂಷಣ್ ಹಾಗೂ ರಕ್ಷಿತ್ ರೆಡ್ಡಿ, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಕುಬೇರ್ ಅಚ್ಚು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದನ್ನೂ ಓದಿ : ಜಿರಳೆಗಳ ವಿರುದ್ಧ ಲಾಠಿಚಾರ್ಜ್; ವಿಡಿಯೋ ನೋಡಲು ಸಮಯವಿಲ್ಲ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ..!

Related posts

ಚಿತ್ರರಂಗ ಉದ್ದಾರ ಆಗಲ್ಲ: ‘ಕರಾವಳಿ’ ವಿವಾದಕ್ಕೆ ರಾಜ್ ಶೆಟ್ಟಿ ಪ್ರತಿಕ್ರಿಯೆ..!

Kalpana Editor

ತುಂಗಭದ್ರಾ ಜಲಾಶಯಕ್ಕೆ ಜೀವಕಳೆ; ಕಲ್ಯಾಣ ಕರ್ನಾಟಕ ರೈತರಲ್ಲಿ ಹರ್ಷ

Kalpana Editor

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ..!

Kalpana Editor