ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಿರುವುದಾಗಿ ಹಾಗೂ ಸಮಾಜದ ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಯಶ್‌ಪಾಲ್ ಸುವರ್ಣ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಮಾತನಾಡಿ, ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ಹಾಗೂ ಪೊಲೀಸರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿದರು. ಸಮಾಜದಲ್ಲಿ ಅಶಾಂತಿ ಹಾಗೂ ಕೋಮು ಸಾಮರಸ್ಯಕ್ಕೆ ಭಂಗ ಉಂಟುಮಾಡುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಾನೂನು ಎಲ್ಲರಿಗೂ ಸಮಾನವಾಗಿರಬೇಕು. ಯಾರೇ ಆಗಿರಲಿ ದ್ವೇಷ, ಹಿಂಸೆ ಅಥವಾ ಸಮಾಜದಲ್ಲಿ ಉದ್ವಿಗ್ನತೆ ಉಂಟುಮಾಡುವ ಹೇಳಿಕೆಗಳನ್ನು ನೀಡಿದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇದೇ ವೇಳೆ, ನೋಟಿಸ್ ನೀಡಲು ತೆರಳಿದ ಪೊಲೀಸರ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಅನುಚಿತವಾಗಿ ವರ್ತಿಸಿದ್ದು ಹಾಗೂ ತಮ್ಮ ಬೆಂಬಲಿಗರ ಮೂಲಕ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿಸಿರುವುದು ಪೊಲೀಸ್ ಇಲಾಖೆಗೆ ಅವಮಾನ ಮಾಡಿದಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಬಿಜೆಪಿ ನಾಯಕರಿಂದ ನಡೆಯುತ್ತಿದೆ ಎನ್ನಲಾದ ಕೋಮು ಪ್ರಚೋದನೆ ಮತ್ತು ಪ್ರಚೋದನಕಾರಿ ಹೇಳಿಕೆಗಳ ವಿರುದ್ಧ ಪೊಲೀಸ್ ಇಲಾಖೆ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಎಸ್. ಮನೋಹರ್, ಕಾಂಗ್ರೆಸ್ ಮುಖಂಡರಾದ ಎಂ.ಎಸ್. ಆನಂದ್ ಕುಮಾರ್, ಕುಶಾಲ್ ಹರುವೇಗೌಡ, ಮುರುಳಿ, ಪುಟ್ಟರಾಜು, ಮಾಧವಹನೂರು ಒಬಳೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಇದನ್ನೂ ಓದಿ : ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು; ಟಿ.ಎ. ನಾರಾಯಣಗೌಡ ಆಗ್ರಹ..!
