ಹುಬ್ಬಳ್ಳಿ : ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ Public Examinations (Prevention of Unfair Means) Amendment Bill-2026 ಅನ್ನು ಲೋಕಸಭೆ ಅಂಗೀಕರಿಸಿದ್ದು, ಇದು ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ನಿಟ್ಟಿನ ಮಹತ್ವದ ಹೆಜ್ಜೆಯಾಗಿದೆ ಎಂದು ಕೇಂದ್ರ ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಈ ತಿದ್ದುಪಡಿ ಮಸೂದೆ ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಠಿಣ ಕಾನೂನು ಚೌಕಟ್ಟನ್ನು ಒದಗಿಸಲಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಶಿಕ್ಷೆಯ ನಿಯಮಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ತ್ವರಿತ ನ್ಯಾಯಾಲಯಗಳ (Fast-Track Courts) ಸ್ಥಾಪನೆಯೂ ಮಹತ್ವದ ಹೆಜ್ಜೆಯಾಗಿದ್ದು, ಪರೀಕ್ಷಾ ಅಕ್ರಮ ಪ್ರಕರಣಗಳ ತ್ವರಿತ ವಿಚಾರಣೆಗೆ ಇದು ನೆರವಾಗಲಿದೆ ಎಂದು ತಿಳಿಸಿದ್ದಾರೆ.
ಈ ಮಸೂದೆಯಿಂದ ದೇಶದಾದ್ಯಂತ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆ ಮತ್ತಷ್ಟು ಬಲಗೊಳ್ಳಲಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಜಾಲದ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಕಟಿಬದ್ಧವಾಗಿದೆ ಎಂದರು. ಇದನ್ನೂ ಓದಿ : KPSC ಅಕ್ರಮ ಹಾಗೂ ಪಶುವೈದ್ಯಾಧಿಕಾರಿ ನೇಮಕಾತಿ ಭ್ರಷ್ಟಾಚಾರ ಖಂಡಿಸಿ; ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ..!
