ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ತಕ್ಷಣ ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಪ್ರಸಕ್ತ ಪರಿಸ್ಥಿತಿಯಲ್ಲಿ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೂ ಹಾಗೂ ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಸಾಧ್ಯವಿಲ್ಲ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀರಾ ಕಡಿಮೆಯಿದ್ದು, ಲಭ್ಯವಿರುವ ನೀರು ರಾಜ್ಯದ ಕುಡಿಯುವ ನೀರಿನ ಅಗತ್ಯತೆ ಹಾಗೂ ರೈತರ ಬೆಳೆಗಳ ರಕ್ಷಣೆಗೆ ಮಾತ್ರ ಸಾಕಾಗುವಂತಿದೆ ಎಂದು ತಿಳಿಸಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕಾವೇರಿ ನೀರನ್ನೇ ಅವಲಂಬಿಸಿರುವ ನಗರಗಳು ಹಾಗೂ ಗ್ರಾಮಗಳ ಕುಡಿಯುವ ನೀರಿನ ಭದ್ರತೆ ಸರ್ಕಾರದ ಮೊದಲ ಆದ್ಯತೆಯಾಗಬೇಕು. ಜನರ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದೆ ಎಂದು ಅವರು ಒತ್ತಾಯಿಸಿದ್ದಾರೆ.
ಜಲಾನಯನ ಪ್ರದೇಶಗಳಲ್ಲಿ ನಿರೀಕ್ಷಿತ ಪ್ರಮಾಣಕ್ಕಿಂತ ಸುಮಾರು ಶೇ.50ರಷ್ಟು ಕಡಿಮೆ ಮಳೆಯಾಗಿರುವುದರಿಂದ ಜಲಾಶಯಗಳಿಗೆ ಹರಿದುಬರುವ ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನಿಗದಿತ ಪ್ರಮಾಣದ ನೀರನ್ನು ಬಿಡುಗಡೆ ಮಾಡುವುದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕವು ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ಪ್ರಾಧಿಕಾರದ ಆದೇಶಗಳನ್ನು ಸದಾ ಗೌರವಿಸುತ್ತಾ ಬಂದಿದೆ.
ಆದರೆ ರಾಜ್ಯದ ಜನರ ಕುಡಿಯುವ ನೀರು ಮತ್ತು ರೈತರ ಹಿತಾಸಕ್ತಿಯನ್ನು ಬಲಿ ಕೊಟ್ಟು ನೀರು ಹರಿಸಲು ಸಾಧ್ಯವಿಲ್ಲ. ಆದ್ದರಿಂದ ಸಂಕಷ್ಟ ಸೂತ್ರ (Distress Formula) ಆಧಾರದ ಮೇಲೆ ಪ್ರಸ್ತುತ ಪರಿಸ್ಥಿತಿಯನ್ನು ಮರುಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಬೇಕು ಎಂದು ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ. ಕರ್ನಾಟಕದ ಹಿತಾಸಕ್ತಿ, ರೈತರ ಬದುಕು ಹಾಗೂ ಕುಡಿಯುವ ನೀರಿನ ಭದ್ರತೆಯನ್ನು ಕಾಪಾಡಲು ರಾಜ್ಯ ಸರ್ಕಾರ ದೃಢ ನಿಲುವು ತಾಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ : ಕರ್ನಾಟಕಕ್ಕೆ ಶಾಕ್, ತಮಿಳುನಾಡಿಗೆ ಪ್ರತಿನಿತ್ಯ ನೀರು ಹರಿಸಿ; CWMA
