ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪದೇಪದೇ ಅಕ್ರಮಗಳು ನಡೆಯುತ್ತಿದ್ದು, ಇತ್ತೀಚೆಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲೂ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಿ ಹುದ್ದೆ ಪಡೆದು ಜನಸೇವೆ ಮಾಡುವುದು ಪ್ರತಿಯೊಬ್ಬ ವಿದ್ಯಾವಂತ ಯುವಕ-ಯುವತಿಯ ಕನಸಾಗಿದೆ.
ಆದರೆ, ರಾಜ್ಯದ ಲೋಕಸೇವಾ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪದೇಪದೇ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಎಬಿವಿಪಿ ಆರೋಪಿಸಿತು. ಇತ್ತೀಚೆಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸುಮಾರು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಜುಲೈ 17ರಂದು ಪ್ರಕಟವಾದ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಒಂದು ಹುದ್ದೆಗೆ ₹80 ಲಕ್ಷದವರೆಗೆ ಹಣ ಪಡೆದು ನೇಮಕಾತಿ ನಡೆಸಲಾಗಿದೆ, ಅಭ್ಯರ್ಥಿಗಳಿಂದ ಹಣದ ಬೇಡಿಕೆ ಇಡಲಾಗಿದೆ ಹಾಗೂ OMR ಶೀಟ್‌ಗಳಲ್ಲಿ ತಿದ್ದುಪಡಿ (ಟ್ಯಾಂಪರಿಂಗ್) ನಡೆದಿದೆ ಎಂಬ ಗಂಭೀರ ಆರೋಪಗಳನ್ನು ಪ್ರತಿಭಟನಾಕಾರರು ಉಲ್ಲೇಖಿಸಿದರು.
ಕಷ್ಟಪಟ್ಟು ಪರೀಕ್ಷೆ ಬರೆದ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅವಕಾಶ ದೊರೆಯದೆ, ಹಣ ಮತ್ತು ಪ್ರಭಾವದ ಆಧಾರದ ಮೇಲೆ ಮೆರಿಟ್ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ ಎನ್ನುವುದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಮಾಡಿದ ಅನ್ಯಾಯವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಅದೇ ರೀತಿ, ಲೋಕಸೇವಾ ಆಯೋಗದ ಅಧ್ಯಕ್ಷರ ವಿರುದ್ಧವೂ ಸುಳ್ಳು ದಾಖಲೆಗಳು ಮತ್ತು ಪ್ರಭಾವ ಬಳಸಿ ತಮ್ಮ ಮಕ್ಕಳಿಗೆ ಸರ್ಕಾರಿ ಉದ್ಯೋಗ ದೊರಕುವಂತೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಇದರಿಂದ ಆಯೋಗದ ವಿಶ್ವಾಸಾರ್ಹತೆಗೆ ಧಕ್ಕೆ ಉಂಟಾಗಿದೆ.
ಇಂತಹ ಬೆಳವಣಿಗೆಗಳ ನಡುವೆಯೂ ರಾಜ್ಯ ಸರ್ಕಾರ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಎಬಿವಿಪಿ ಟೀಕಿಸಿತು. KPSC ಮೇಲಿನ ಯುವಜನರ ವಿಶ್ವಾಸ ಕುಸಿದಿದ್ದು, ಉದ್ಯೋಗಾಕಾಂಕ್ಷಿಗಳು ಸರ್ಕಾರದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಯುವಕರ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಭ್ರಷ್ಟ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಎಬಿವಿಪಿಯ ಪ್ರಮುಖ ಬೇಡಿಕೆಗಳು :
- KPSC ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರನ್ನು ತನಿಖೆಗೆ ಒಳಪಡಿಸಬೇಕು.
- ಪ್ರಕರಣವನ್ನು CBI ಅಥವಾ ನ್ಯಾಯಾಂಗ ತನಿಖೆಗೆ ವಹಿಸಬೇಕು.
- ಪ್ರಕರಣದ ತ್ವರಿತ ವಿಚಾರಣೆಗಾಗಿ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯವನ್ನು ರಚಿಸಬೇಕು.
- ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸುಧಾರಿತ ತಂತ್ರಜ್ಞಾನ ಅಳವಡಿಸಬೇಕು.
- ಕಳೆದ ಐದು ವರ್ಷಗಳಲ್ಲಿ KPSC ನಡೆಸಿದ ಎಲ್ಲಾ ನೇಮಕಾತಿ ಪರೀಕ್ಷೆಗಳ ಕುರಿತು ಸಮಗ್ರ ತನಿಖೆ ನಡೆಸಬೇಕು.
ಈ ಎಲ್ಲಾ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಿ, KPSC ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಮರುಸ್ಥಾಪಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು. ಈ ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಯಶ್ವಂತ್, ಮಹಾನಗರ ಕಾರ್ಯದರ್ಶಿ ಅಭಿನಂದನ್, ಸಹಕಾರ್ಯದರ್ಶಿಗಳಾದ ಕೋಟಪ್ಪ ಹಾಗೂ ಆದರ್ಶ್, ಮಹಾನಗರ ಹೋರಾಟ ಪ್ರಮುಖ ರವಿ ನರೇಗಲ್ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು. ಇದನ್ನೂ ಓದಿ : ರಾಜ್ಯದಲ್ಲಿ ಹಲವು ಬಾರಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ; ರಾಹುಲ್ ಗಾಂಧಿ ಮಾತನಾಡಿದ್ರಾ? – ಗೋವಿಂದ ಕಾರಜೋಳ ಕಿಡಿ..!
