August 1, 2026
kranthikidi.com
ತಾಜಾಸುದ್ದಿದೇಶ

ಕಿಂಡರ್‌ಗಾರ್ಟನ್‌ನಿಂದ ಪಿಜಿವರೆಗೆ ಉಚಿತ ಶಿಕ್ಷಣ; ಒಡಿಶಾ ಸರ್ಕಾರ ಘೋಷಣೆ..!

ಭುವನೇಶ್ವರ : ಸರ್ಕಾರಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಇನ್ಮುಂದೆ ಯಾವುದೇ ಶುಲ್ಕ ಇರುವುದಿಲ್ಲ. ಕಿಂಡರ್‌ಗಾರ್ಟನ್‌ನಿಂದ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಘೋಷಿಸಿದ್ದಾರೆ.

ಶಿಕ್ಷಣವನ್ನು ಉಚಿತ ಮತ್ತು ಸಾರ್ವತ್ರಿಕಗೊಳಿಸುವುದಾಗಿ ಘೋಷಿಸಿರುವ ಮುಖ್ಯಮಂತ್ರಿಗಳು, ಇಡೀ ದೇಶದಲ್ಲೇ ಇಂತಹದ್ದೊಂದು ಮಹತ್ವದ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಒಡಿಶಾವಾಗಿದೆ. ಈ ಯೋಜನೆ ಪ್ರಮುಖವಾಗಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ವಿದ್ಯಾಭ್ಯಾಸದಲ್ಲಿ ಸಂಶೋಧನೆಯ ಗುರಿ ಇಟ್ಟುಕೊಂಡವರಿಗೆ ವರದಾನವಾಗಲಿದೆ ಎಂದು ತಿಳಿಸಿದ್ದಾರೆ.

ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ರಾಜ್ಯದ 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲಾಭವಾಗಲಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಒಡಿಶಾದಲ್ಲಿ ಈಗಾಗಲೇ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿತ್ತು. ಇದೀಗ ಅದನ್ನು ಉನ್ನತ ಶಿಕ್ಷಣಕ್ಕೂ ವಿಸ್ತರಿಸಿರುವುದರಿಂದ, ಆರ್ಥಿಕ ಸಂಕಷ್ಟದಿಂದ ಉನ್ನತ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದ ವಿದ್ಯಾರ್ಥಿಗಳಿಗೆ ಸರ್ಕಾರದ ಈ ಯೋಜನೆ ನೆರವಾಗಲಿದೆ.

ಸರ್ಕಾರಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಶುಲ್ಕ ಕಡಿಮೆ ಇದ್ದರೂ, ಈಗ ಅದನ್ನು ಸಂಪೂರ್ಣ ಉಚಿತ ಮಾಡಿರುವುದರಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ಸುಮಾರು 30 ಕೋಟಿ ರೂ.ಗಳ ಹೆಚ್ಚುವರಿ ಹೊರೆ ಬೀಳಲಿದೆ ಎಂದು ಅಂದಾಜಿಸಲಾಗಿದೆ. ಒಡಿಶಾದ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಉಚಿತ ಶಿಕ್ಷಣ ನೀಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಈ ಘೋಷಣೆ ಈ ವರ್ಷದ ಶೈಕ್ಷಣಿಕ ವರ್ಷದಿಂದ ಜಾರಿಗೆ ಬಂದಿದೆ.

ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ 45,000ಕ್ಕೂ ಹೆಚ್ಚು ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ 26,000ಕ್ಕೂ ಹೆಚ್ಚು ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಉನ್ನತ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಲು ಶೀಘ್ರದಲ್ಲೇ ನಾಲ್ಕು ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು. ಈ ಯೋಜನೆಗಳಿಗೆ ಬಜೆಟ್‌ನಲ್ಲಿ ಅಗತ್ಯ ಹಣಕಾಸಿನ ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದು ಮೋಹನ್ ಚರಣ್ ಮಾಝಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ಭೂ ಪರಿಹಾರ ನೀಡದ್ದಕ್ಕೆ, ಆಕ್ರೋಶ; ಬಿಟಿಡಿಎ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ರೈತ..!

“ಕಳೆದ ಎರಡು ವರ್ಷಗಳ ನಮ್ಮ ಸರ್ಕಾರದ ಅವಧಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಪ್ರಮುಖ ಆದ್ಯತೆ ನೀಡಲಾಗಿದೆ. ದಕ್ಷಿಣ ಮತ್ತು ಉತ್ತರ ಒಡಿಶಾವನ್ನು ಸಂಪರ್ಕಿಸುವ ಎರಡು ಹೆದ್ದಾರಿಗಳು ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ” ಎಂದು ಅವರು ಹೆಳಿದ್ದಾರೆ.

ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಕುರಿತು ವಿರೋಧ ಪಕ್ಷಗಳು ಮಾಡುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಇದೆಲ್ಲಾ ರಾಜಕೀಯ ಪ್ರೇರಿತ. ರಾಜ್ಯದಲ್ಲಿ ನಡೆದಿರುವ ಎಲ್ಲಾ ಅಪರಾಧಗಳಲ್ಲೂ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವ ಪ್ರಮಾಣ ಹೆಚ್ಚಾಗಿದೆ ಎಂದು ತಿರುಗೇಟು ನೀಡಿದ್ದಾರೆ.

Related posts

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮಳೆ ಎಫೆಕ್ಟ್ – ರಕ್ಕಸಕೊಪ್ಪ ಜಲಾಶಯ ಭರ್ತಿ..!

Kalpana Editor

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ಬಸವರಾಜ ಬೊಮ್ಮಾಯಿ ಆಕ್ರೋಶ..!

Kalpana Editor

ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ..!

Kalpana Editor