ನವದೆಹಲಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸತತ 2ನೇ ವರ್ಷವೂ ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದರು.
ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಮುಂದುವರಿದಿರುವ ಬೆನ್ನಲ್ಲೇ ಈ ಗೈರುಹಾಜರಿ ನಡೆದಿದೆ ಎನ್ನಲಾಗ್ತಿದೆ. ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಮುಂಗಾರು ಅಧಿವೇಶನದಲ್ಲೂ ಹಲವು ವಿಚಾರಗಳಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಸಂಘರ್ಷ ಉಂಟಾಗಿತ್ತು.
2024ರ ಸ್ವಾತಂತ್ರ್ಯೋತ್ಸವದಲ್ಲಿ ರಾಹುಲ್ ಗಾಂಧಿ ಅವರಿಗೆ ಕೆಂಪುಕೋಟೆಯಲ್ಲಿ 2ನೇ ಸಾಲಿನ ಹಿಂದಿನ ಭಾಗದಲ್ಲಿ ಆಸನ ವ್ಯವಸ್ಥೆ ಮಾಡಿದ್ದ ವಿಚಾರವೂ ವಿವಾದಕ್ಕೆ ಕಾರಣವಾಗಿತ್ತು. ವಿರೋಧ ಪಕ್ಷ ಇದನ್ನು ಅವಮಾನ ಎಂದು ಟೀಕಿಸಿತ್ತು. ಆದರೆ, ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಆಸನ ಕಲ್ಪಿಸಲು ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿತ್ತು ಎಂದು ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿತ್ತು. ಶಿಷ್ಟಾಚಾರದ ಪ್ರಕಾರ, ಲೋಕಸಭೆಯ ವಿರೋಧ ಪಕ್ಷದ ನಾಯಕನಿಗೆ ಗಣ್ಯ ಕಾರ್ಯಕ್ರಮಗಳಲ್ಲಿ ಮುಂಭಾಗದ ಸಾಲಿನಲ್ಲಿ ಆಸನ ನೀಡಲಾಗುತ್ತದೆ. ಇದನ್ನೂ ಓದಿ : ತಿರುಮಲ ಶ್ರೀವಾರಿ ಭಕ್ತರೇ ಎಚ್ಚರ; ನಕಲಿ ವೆಬ್‌ಸೈಟ್‌ಗಳು ಬಂದ್..!
