28.1 C
ಬೆಂಗಳೂರು
October 8, 2026
kranthikidi.com
ತಾಜಾಸುದ್ದಿರಾಜ್ಯ

ಸೂಪರ್ ಎಲ್ ನೀನೋ ಪರಿಣಾಮ ಎದುರಿಸಲು ಸಜ್ಜಾಗಿ; ಡಿಸಿಎಂ ಡಾ. ಜಿ.ಪರಮೇಶ್ವರ

ಬೆಂಗಳೂರು : ರಾಜ್ಯದಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನೀನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ವಿಧಾನಸೌಧದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಈವರೆಗೆ ಕೈಗೊಂಡಿರುವ ಅಗತ್ಯ ಕ್ರಮಗಳ ಕುರಿತು ಮಾಹಿತಿ ಪಡೆದು, ಮಳೆ ಕೊರತೆ, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸಮಸ್ಯೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.

ಜಾಗತಿಕ ಹವಾಮಾನ ವೈಪರೀತ್ಯದ ಭಾಗವಾಗಿ ಸೂಪರ್ ಎಲ್ ನೀನೋ ಪರಿಣಾಮದಿಂದ ರಾಜ್ಯದಲ್ಲಿ ಉಂಟಾಗಬಹುದಾದ ಸಂಭವನೀಯ ಪರಿಣಾಮಗಳು, ಮಳೆಯ ಕೊರತೆಯಿಂದ ಜನರು ಎದುರಿಸಬಹುದಾದ ಸಮಸ್ಯೆಗಳು ಹಾಗೂ ರಾಜ್ಯದ ಕೆಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು.

ಸಂಭವನೀಯ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆಗಳ ನಿರ್ವಹಣೆ ಹಾಗೂ ನೀರಿನ ಸಂರಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಕಾರ್ಯಯೋಜನೆಗಳನ್ನು ಸಿದ್ಧಪಡಿಸಬೇಕು. ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ‌ಪಂಚಾಯತ್ ಸಿಇಒಗಳಿಗೆ ಅಗತ್ಯ ಸೂಚನೆಗಳನ್ನು ನೀಡಬೇಕು.

ಜಲಾಶಯಗಳ ನೀರಿನ ಮಟ್ಟ, ಅಂತರ್ಜಲ ಪರಿಸ್ಥಿತಿ ಹಾಗೂ ನೀರಿನ ಬಳಕೆಯ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾವುದೇ ರೀತಿಯ ಪ್ರಕೃತಿ ವಿಕೋಪ ಅಥವಾ ಬರ ಪರಿಸ್ಥಿತಿ ಎದುರಾದರೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಬಂಧಿತ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು.

ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲು ಅನುಮತಿಯನ್ನು ತ್ವರಿತಗತಿಯಲ್ಲಿ ನೀಡಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ವಿಳಂಬವಾಗಬಾರದು. ಅಗತ್ಯವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. 122 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 139 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

789 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆಯಲಾಗಿದ್ದು, 669 ಹಳ್ಳಿಗಳಲ್ಲಿ ಖಾಸಗಿ ಕೊಳವೆಬಾವಿಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಹಿರಿಯ ಅಧಿಕಾರಿಗಳಾದ ಮನೋಜ್ ಕುಮಾರ್ ಮೀನಾ, ಮುಲ್ಲೈ ಮುಗಿಲನ್ ಮುಂತಾದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ : ಕಲೇಶಪುರ ಹಾಲಿ ಶಾಸಕ ಹಾಗೂ ಮಾಜಿ ಮಾಜಿ ಶಾಸಕ ನಡುವಿನ ವಾಕ್ಸಮರ..!

Related posts

ಗಾಂಧೀ ಕನಸು ನನಸು ಮಾಡುವ ಖಾತೆ ಸಿಕ್ಕಿದೆ – ಈಶ್ವರ ಖಂಡ್ರೆ

kknewskannada1987@gmail.com

ಕೋಯಿಕ್ಕೋಡ್‌ದಲ್ಲಿ ನಿಫಾ ಸೋಂಕು ದೃಢ – ಕೇರಳದಲ್ಲಿ ಹೈ ಅಲರ್ಟ್..!

Kalpana Editor

ಮತ್ತೆ ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್ – ಜಾಮೀನು ಅರ್ಜಿ ಸಲ್ಲಿಸದಂತೆ ನೀಡಿದ್ದ, ಆದೇಶ ಮಾರ್ಪಾಡಿಗೆ ಮನವಿ..!

Kalpana Editor